ನವದೆಹಲಿ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ಖಂಡಿಸಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ ಆಗಸ್ಟ್ 17ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಹಿಂತೆಗೆದುಕೊಂಡಿತ್ತು. ಎಲ್ಲ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ ಪ್ರತಿಭಟನೆ ನಡೆಸಿದ್ದು, ಇದರಿಂದ ಹಲವೆಡೆ ವೈದ್ಯಕೀಯ ಸೇವೆ ವ್ಯತ್ಯಯಗೊಂಡಿತು.
ಅತ್ಯಾಚಾರ ನಡೆಸಿದ ಅಪರಾಧಿಗಳಿಗೆ ಆದಷ್ಟು ಬೇಗ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಮರಣೋತ್ತರ ಪರೀಕ್ಷಾ ವರದಿಯನ್ನು ಬಹಿರಂಗಪಡಿಸಬೇಕು ಎಂದೂ ಪ್ರತಿಭಟನಾನಿರತ ಕಿರಿಯ ವೈದ್ಯರು ಆಗ್ರಹಿಸಿದ್ದಾರೆ. ಕರ್ತವ್ಯ ನಿರತ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ʼನಾನು ಮುಂದಿನ ಸಂತ್ರಸ್ತೆ ಆಗಲು ಇಚ್ಛಿಸುವುದಿಲ್ಲʼ ಎನ್ನುವ ಘೋಷ ವಾಕ್ಯ ಗಮನ ಸೆಳೆಯುತ್ತಿದೆ.
ಈ ಮಧ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಮುಖ ಆರೋಪಿ ಸಂಜಯ್ ರಾಯ್‌ನ ಮಾನಸಿಕ ವಿಶ್ಲೇಷಣೆಯನ್ನು ಸಿಬಿಐ ತಂಡ ಇಂದು ನಡೆಸಲಿದೆ. ಈ ಪ್ರಕರಣದಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಪೊಲೀಸರಿಗೆ ಕರೆ ಮಾಡಲು ವಿಳಂಬವಾಗಲು ಕಾರಣಗಳ ಬಗ್ಗೆ ಘೋಷ್ ಅವರನ್ನು ಪ್ರಶ್ನಿಸಲಾಗುತ್ತಿದೆ. ಸಿಬಿಐ ತಂಡ ಶನಿವಾರ ಸಂಜಯ್ ರಾಯ್ ನಿವಾಸದಿಂದ ಕೆಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮೂಲಗಳ ಪ್ರಕಾರ ವೈದ್ಯೆಯ ಮೃತದೇಹದ ಬಳಿ ಡೈರಿ ಪತ್ತೆಯಾಗಿದ್ದು, ಇದರಲ್ಲಿನ ಹಲವು ಪುಟಗಳು ಹರಿದಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆಯೂ ತನಿಖೆ ನಡೆಯಲಿದೆ.