ಹೈದರಾಬಾದ್: ಎಲೆಕ್ಟ್ರಿಕ್ ಬಸ್‌ಗೆ ಬೆಂಕಿ ಕಾಣಿಸಿಕೊಂಡ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದೆ. ಬಸ್‌ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎಲೆಕ್ಟ್ರಿಕ್ ಬಸ್ ಕರೀಂನಗರದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. ಈ ವೇಳೆ ಎಲ್‌ಎಂಡಿ ಕಾಲೋನಿ ಸಮೀಪ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಅದನ್ನು ಗಮನಿಸಿದ ಚಾಲಕ ತಕ್ಷಣ ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾನೆ. ಬಳಿಕ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ.
ಹೊಗೆ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ್ದು, ಸಂಪೂರ್ಣ ಬಸ್ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಕಾಣಿಸಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

