ಶ್ರೀನಗರ: ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಎನ್‌ಕೌಂಟರ್ ನಡೆದಿದ್ದು, ಓರ್ವ ಸೇನಾ ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ.
ಮೊದರ್ಗಾಮ್ ಗ್ರಾಮದಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಸಿಆರ್‌ಪಿಎಫ್, ಸೇನೆ ಮತ್ತು ಸ್ಥಳೀಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ನಂತರ ಎನ್‌ಕೌಂಟರ್ ನಡೆದಿದೆ. ಈ ವೇಳೆ ಸೇನಾ ಸಿಬ್ಬಂದಿ ಗಾಯಗೊಂಡಿದ್ದರು.
ಆರಂಭಿಕ ಗುಂಡಿನ ದಾಳಿಯಲ್ಲಿ ಗಾಯಗೊಂಡ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಶ್ಮೀರ ವಲಯ ಪೊಲೀಸರು ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕುಲ್ಗಾಮ್ ಜಿಲ್ಲೆಯ ಮೊದರ್ಗಾಮ್ ಗ್ರಾಮದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂಬ ಮಾಹಿತಿ ತಿಳಿದು ಬಂದಿದೆ.

