ಕೊಲ್ಕತ್ತಾ: ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಇಂದು (ಸೆ.2) ಬಂಧಿಸಿದೆ.
ಕೊಲ್ಕತ್ತಾ ಹೈಕೋರ್ಟ್‌ನ ಆದೇಶದ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಮೊದಲನೆಯದು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲೆ ಮತ್ತು ಎರಡನೆಯದು ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಪಾದಿತ ಆರ್ಥಿಕ ಅಕ್ರಮಗಳ ಮೇಲೆ. ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು.
ಸಿಬಿಐ ಪ್ರಸ್ತುತ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಅಪರಾಧಕ್ಕೆ ಸಂಬಂಧಿಸಿದಂತೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಯನ್ನೂ ಸಿಬಿಐ ನಡೆಸಿದೆ.

