ಗುವಾಹಟಿ: ಅಸ್ಸಾಂನಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ. ಬುಧವಾರ ಒಂದೇ ದಿನ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿನ 5.64 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಶಿವಸಾಗರ್ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಅಂದರೆ 13 ಮಂದಿ ಮೃತಪಟ್ಟಿದ್ದಾರೆ. ಚರೈದಿಯೋ ಜಿಲ್ಲೆಯಲ್ಲಿ ಐವರು, ಗೋಲಾಘಾಟ್‌ನಲ್ಲಿ ಇಬ್ಬರು ಹಾಗೂ ಜೋರ್ಹಾಟ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಪ್ರವಾಹದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಲ್ಲಿ ಶಿವಸಾಗರ್, ಜೋರ್ಹಾಟ್ ಹಾಗೂ ಚರೈದಿಯೋ ಪ್ರಮುಖವಾಗಿವೆ. ಶಿವಸಾಗರ್ ಜಿಲ್ಲೆಯಲ್ಲಿ 3,59,535 ಮಂದಿ, ಜೋರ್ಹಾಟ್‌ನಲ್ಲಿ 87,662 ಮಂದಿ ಮತ್ತು ಚರೈದಿಯೋ ಜಿಲ್ಲೆಯಲ್ಲಿ 72,646 ಮಂದಿ ಪ್ರವಾಹದಿಂದ ತೊಂದರೆ ಅನುಭವಿಸುತ್ತಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ.