ತಿರುವನಂತಪುರಂ: ನೆರೆಯ ರಾಜ್ಯ ಕೇರಳ ಹಾಗೂ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದ ಪತ್ತನಂತಿಟ್ಟು, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ ಮತ್ತು ವಯನಾಡು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಬ್ಬರ ಜೋರಾಗಿರಲಿದೆ ಎಂದು ತಿಳಿಸಲಾಗಿದೆ. ಒಟ್ಟಾರೆಯಾಗಿ 11 ರಿಂದ 20 ಸೆಂಟಿ ಮೀಟರ್ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಇನ್ನು ಕೇರಳ, ಕರ್ನಾಟಕ ಹೊರತುಪಡಿಸಿ, ಉತ್ತರಾಖಂಡ್, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಅನೇಕ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

