ತಿರುವನಂತಪುರಂ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಬೆನ್ನಲ್ಲೇ ಗಲ್ಫ್ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಿವಾರ ಪತ್ರ ಬರೆದಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದಿರುವುದು ಅಲ್ಲಿ ಕೆಲಸ ಮಾಡುತ್ತಿರುವವರ ಕುಟುಂಬಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಅನಿವಾಸಿ ಭಾರತೀಯರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದರೆ ಗಲ್ಫ್ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಸ್ಥಳಾಂತರ ಯೋಜನೆಯನ್ನು ಸಿದ್ಧಪಡಿಸಿಕೊಳ್ಳಬೇಕು. ಅನಿವಾಸಿಗಳ ಕ್ಷೇಮಸಮಾಚಾರ ತಿಳಿಯಲು ಮತ್ತು ಅವರ ಕುಟುಂಬಗಳ ಆತಂಕ ದೂರ ಮಾಡಲು ರಾಯಭಾರಿ ಕಚೇರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

