ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ನ.20ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ, ಮಹಾರಾಷ್ಟ್ರ ಚುನಾವಣೆ ಹಾಗೂ ಫಲಿತಾಂಶದ ದಿನಾಂಕ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
26 ಜಿಲ್ಲೆಗಳ 288 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 4.97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. 1,00,186 ಮತದಾನ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಮತದಾನ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸೌಕರ್ಯಗಳನ್ನು ನಿರ್ಮಿಸಲಾಗುವುದು. ಮತದಾನದ ಲೈನ್‌ನಲ್ಲಿ ಕುರ್ಚಿ ಮತ್ತು ಟೇಬಲ್ ಹಾಕಲು ಸೂಚಿಸಲಾಗಿದೆ.
ಇದು ವೃದ್ಧ ಮತದಾರರಿಗೆ ಅನುಕೂಲವಾಗಲಿದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಿರಿಯರ ಮತ ಪಡೆಯುವ ರೂಟ್‌ಮ್ಯಾಪ್ ರಾಜಕೀಯ ಪಕ್ಷಗಳಿಗೆ ನೀಡಲಾಗುವುದು. ಮತದಾನದ ಸಂಪೂರ್ಣ ವೀಡಿಯೋ ಚಿತ್ರೀಕರಣ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಅಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.