ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಗಾಯಗೊಂಡಿದ್ದಾರೆ.

ಘಾಟ್ಕೋಪರ್ ಪೂರ್ವದ ಪಂತ್‌ನಗರದ ವಲ್ಲಭ್ ಬಾಗ್ ಲೇನ್‌ನಲ್ಲಿರುವ 21 ಅಂತಸ್ತಿನ ರಾಯಲ್ ಅಲ್ಟೆಝಾ ವಸತಿ ಕಟ್ಟಡದ 20ನೇ ಮಹಡಿಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಪಟಾಕಿ ಸಿಡಿತ ಅಥವಾ ರಾಕೆಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಶುಕ್ರವಾರ ರಾತ್ರಿ 8.08ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಟ್ಟಡದ ಮೇಲಿನ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಮಾಹಿತಿ ತಿಳಿದ ತಕ್ಷಣ ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅಗ್ನಿ ಅವಘಡದಲ್ಲಿ ಸಾಯಿನಾಥ್ ಅವಾಲೆ (45) ಎಂಬವರು ಶೇ.27ರಷ್ಟು ಸುಟ್ಟ ಗಾಯಗಳಿಂದ ಬಳಲಿದ್ದಾರೆ.

ಅವರನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ನೀರವ್ ಲೋಡಯಾ (34) ಮತ್ತು ರಾಜೇಶ್ ಲೋಡಯಾ (47) ಎಂಬವರನ್ನೂ ಗಾಯಗಳ ಹಿನ್ನೆಲೆಯಲ್ಲಿ ಸಮೀಪದ ಜೈನೋವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯೂ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಗ್ನಿ ಅವಘಡದ ತೀವ್ರತೆಯನ್ನು ಗಮನಿಸಿ ಬೆಂಕಿಯನ್ನು ಲೆವೆಲ್-2 ಎಂದು ವರ್ಗೀಕರಿಸಲಾಗಿತ್ತು. ಕನಿಷ್ಠ ಎಂಟು ಅಗ್ನಿಶಾಮಕ ವಾಹನಗಳು ಹಾಗೂ ಅಗತ್ಯ ಉಪಕರಣಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡದಲ್ಲಿದ್ದ ನಿವಾಸಿಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಲಾಯಿತು. ಕಟ್ಟಡದೊಳಗೆ ಯಾರಾದರೂ ಸಿಲುಕಿಕೊಂಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಶೋಧ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪಟಾಕಿ ಸಿಡಿತ ಅಥವಾ ರಾಕೆಟ್ ಕಟ್ಟಡಕ್ಕೆ ಬಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ ಬೆಂಕಿಗೆ ನಿಖರ ಕಾರಣವೇನು ಮತ್ತು ಕಟ್ಟಡಕ್ಕೆ ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದು ಇನ್ನೂ ದೃಢಪಟ್ಟಿಲ್ಲ.

ಮುಂಬೈ ಅಗ್ನಿಶಾಮಕ ದಳ, ಪೊಲೀಸರು, ಅದಾನಿ ವಿದ್ಯುತ್ ಸಂಸ್ಥೆ, ಲೋಕೋಪಯೋಗಿ ಇಲಾಖೆ ಹಾಗೂ ಸ್ಥಳೀಯ ನಾಗರಿಕ ವಾರ್ಡ್ ಕಚೇರಿಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಂಬೈ ಮೇಯರ್ ರಿತು ತಾವ್ಡೆ ಅವರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಪರಿಶೀಲನೆ ನಡೆಸಿದರು. ಅಗ್ನಿ ಅವಘಡದ ಕುರಿತು ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.