ಹೊಸದಿಲ್ಲಿ: ರಾಜಧಾನಿ ದಿಲ್ಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಹುಂಡೈ ಐ20 ಮಾದರಿಯ ಕಾರಿನಲ್ಲಿ ಸಂಭವಿಸಿದ ಈ ಸ್ಫೋಟಕ್ಕೆ ಸಂಬಂಧಿಸಿದಂತೆ ವಾಹನದ ಮಾಲಕ ದೇವೇಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಫೋಟದ ಸ್ವರೂಪ ಹಾಗೂ ಹಿನ್ನೆಲೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹಾಗೂ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ತಂಡಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಥಳಕ್ಕೆ ಕಳುಹಿಸಲು ನಿರ್ದೇಶಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಸಂಜೆ ಸುಮಾರು 6.52ರ ಸುಮಾರಿಗೆ ಕೆಂಪುಕೋಟೆ ಟ್ರಾಫಿಕ್ ಸಿಗ್ನಲ್ ಬಳಿ ನಿಧಾನವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ದಿಲ್ಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ತಿಳಿಸಿದ್ದಾರೆ. ಕಾರಿನೊಳಗೆ ಮೂವರು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಇದು ಆತ್ಮಹತ್ಯಾ ಬಾಂಬ್ ದಾಳಿ ಆಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸೇರಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, 20 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಭಾಗಿಯಾದ ಕಾರು ನೋಂದಣಿ ಸಂಖ್ಯೆ HR 26 CE 7674. 2023ರಲ್ಲಿ ಗುರುಗ್ರಾಮ್‌ನ ಸಲ್ಮಾನ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟ ಈ ವಾಹನವನ್ನು ನಂತರ ದೇವೇಂದ್ರ ಅವರಿಗೆ ಮಾರಾಟ ಮಾಡಲಾಗಿತ್ತು. ನಂತರ ಅದು ನದೀಮ್ ಖಾನ್ ಹಾಗೂ ಬಳಿಕ ಜಮ್ಮು–ಕಾಶ್ಮೀರದ ಪುಲ್ವಾಮಾದ ತಾರಿಕ್ ಅವರಿಗೆ ಮಾರಾಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ನಂತರ ದಿಲ್ಲಿ ಸಹಿತ ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್‌ನಲ್ಲೂ ರೆಡ್ ಅಲರ್ಟ್ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.