ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿರುವ ಘಟನೆ ಲಕ್ನೋದ ಬಕ್ಷಿ ಕಾ ತಲಾಬ್ ಪ್ರದೇಶದಲ್ಲಿ ನಡೆದಿದೆ.
ಬಾಲಕಿ ಆಹಾರ ಮಳಿಗೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಬಾಲಕಿ ತನ್ನ ಮನೆಗೆ ಬಂದು ಕುಟುಂಬದ ಸದಸ್ಯರಿಗೆ ವಿಷಯ ತಿಳಿಸಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದೆ.
ದೂರಿನ ಬೆನ್ನಲ್ಲೇ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಘಟನೆಯ ಕುರಿತು ಮಾತನಾಡಿದ ಲಕ್ನೋ ಉತ್ತರದ ಉಪ ಪೊಲೀಸ್ ಆಯುಕ್ತ ಅಭಿಜಿತ್ ಆರ್ ಶಂಕರ್, ಬಾಲಕಿಯ ದೂರಿನ ಆಧಾರದ ಮೇಲೆ, ಬಕ್ಷಿ ಕಾ ತಾಲಾಬ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್, ಪೋಕ್ಸೊ, ಎಸ್‌ಸಿ/ಎಸ್ಟಿ ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.