ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂಬಂಧಿಸಿದಂತೆ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸುತ್ತ ಮುತ್ತ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಆಗಸ್ಟ್ 18ರಂದು ನಿಷೇಧಾಜ್ಞೆ ಹೇರಲಾಗಿತ್ತು. ಆಸ್ಪತ್ರೆ ಪರಿಸರದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸಭೆ ಸೇರುವುದನ್ನು ನಿರ್ಬಂಧಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 163(2) ಅಡಿಯಲ್ಲಿ ನಿಷೇಧಾಜ್ಞೆಯನ್ನು ವಿಸ್ತರಿಸುವ ಕುರಿತು ಕೋಲ್ಕತ್ತ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ವಿಧಿಸುವ ಮೂಲಕ ಪ್ರದೇಶದಲ್ಲಿ ಶಾಂತಿ ಕಾಪಾಡುವ ಉದ್ದೇಶವನ್ನು ಹೊಂದಲಾಗಿದೆ. ನಿಯಮ ಉಲ್ಲಂಘನೆಯಾದರೆ ಬಿಎನ್‌ಎಸ್ ಸೆಕ್ಷನ್ 223ರ ಅಡಿಯಲ್ಲಿ ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.