ಹೈದರಾಬಾದ್: ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಅಭಿಮಾನಿಗಳ ಸಂಭ್ರಮಾಚರಣೆ ಮಿತಿಮೀರಿ ವಿಕೋಪಕ್ಕೆ ತಿರುಗಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಮತ್ತು ಹೈದರಾಬಾದ್‌ನಲ್ಲಿ ನಡೆದಿದೆ.
ವಿಜಯೋತ್ಸವದ ನೆಪದಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರು ಒಟ್ಟು 18 ಜನರನ್ನು ಬಂಧಿಸಿದ್ದಾರೆ. ಭಾನುವಾರ ರಾತ್ರಿ ನಡೆದ ರೋಮಾಂಚನಕಾರಿ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಕ್ರಿಕೆಟ್ ಪ್ರೇಮಿಗಳು ಬೀದಿಗಿಳಿದು ಸಂಭ್ರಮಿಸಲು ಶುರು ಮಾಡಿದ್ದರು.
ಕರ್ನೂಲ್ ನಗರದ ಪ್ರಮುಖ ವೃತ್ತವಾದ ರಾಜ್ ವಿಹಾರ್ ಸೆಂಟರ್ ಬಳಿ ನೂರಾರು ಆರ್‌ಸಿಬಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಸಂಭ್ರಮಾಚರಣೆಯ ಉನ್ಮಾದದಲ್ಲಿದ್ದ ಕೆಲ ಕಿಡಿಗೇಡಿಗಳು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳನ್ನು ಗುರಿಯಾಗಿಸಿಕೊಂಡು ಧ್ವಂಸ ಕೃತ್ಯಕ್ಕೆ ಮುಂದಾಗಿದ್ದರು.
ಅಲ್ಲಿ ಹಾದುಹೋಗುತ್ತಿದ್ದ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಪಿಎಸ್‌ಆರ್‌ಟಿಸಿ) ಹಲವು ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ ಉದ್ರಿಕ್ತರು, ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಇದರಿಂದಾಗಿ ಸಾರ್ವಜನಿಕ ಸಾರಿಗೆಗೆ ಭಾರಿ ನಷ್ಟ ಉಂಟಾಗಿದೆ. ಬಸ್ಸುಗಳು ಮಾತ್ರವಲ್ಲದೆ, ರಸ್ತೆ ಬದಿಯಲ್ಲಿದ್ದ ಕೆಲವು ಖಾಸಗಿ ವಾಹನಗಳು ಹಾಗೂ ಅಂಗಡಿ ಮುಂಗಟ್ಟುಗಳಿಗೂ ಹಾನಿ ಮಾಡಲಾಗಿದೆ.
ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಕರ್ನೂಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ಪಾಟೀಲ್ ಅವರು ಕೃತ್ಯದಲ್ಲಿ ಭಾಗಿಯಾದವರನ್ನು ತಕ್ಷಣವೇ ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ. ತಾಂತ್ರಿಕ ಸಾಕ್ಷ್ಯಾಧಾರಗಳ ನೆರವಿನಿಂದ ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದ 18 ಜನರನ್ನು ಗುರುತಿಸಿ ಸದ್ಯ ಬಂಧನಕ್ಕೆ ಒಳಪಡಿಸಲಾಗಿದೆ.
ಬಂಧಿತ ಆರೋಪಿಗಳನ್ನು ಕರ್ನೂಲ್‌ನ ಟೂ ಟೌನ್ ಪೊಲೀಸ್ ಠಾಣೆಯಿಂದ ಬಿಗಿ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು

