ಕೊಲ್ಕತ್ತಾ: ಕೊಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಭಾರತೀಯ ಜನತಾ ಪಕ್ಷ ಇಂದು ಒತ್ತಾಯಿಸಿದೆ.
ಆಗಸ್ಟ್ 9ರಂದು ತರಬೇತಿ ನಿರತ ಸರ್ಕಾರಿ ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ದುಷ್ಕರ್ಮಿಗಳನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಿ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೂನಾವಾಲಾ, ಐಎನ್‌ಡಿಐಎ ಬ್ಲಾಕ್ ಈ ಪ್ರಕರಣದಲ್ಲಿ ಏಕೆ ಮೌನಕ್ಕೆ ಶರಣಾಗಿದೆ? ಎಂದು ಪ್ರಶ್ನಿಸಿದರು.
ಪಶ್ಚಿಮ ಬಂಗಾಳದಲ್ಲಿ ಕಾನೂನಿನ ನಿಯಮವಿಲ್ಲ ಎಂದು ಆರೋಪಿಸಿದ ಬಿಜೆಪಿ ನಾಯಕ ಪೂನಾವಾಲಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಕೃತ್ಯದ ಅಪರಾಧಿಗಳನ್ನು ಉಳಿಸಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅವರು ಮೃತ ಯುವತಿಗೆ ನ್ಯಾಯ ಕೊಡಿಸುವ ಬಗ್ಗೆ ಗಮನಹರಿಸುತ್ತಿಲ್ಲ. ಆರೋಪಿಗಳು ಈ ಪ್ರಕರಣದಲ್ಲಿ ಟಿಎಂಸಿ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸಮರ್ಥ ಅಧಿಕಾರಿಗಳು ನಿರ್ಧರಿಸಬೇಕು. ಮಹಿಳೆಯರ ಸುರಕ್ಷತೆಗೆ ಧಕ್ಕೆ ಉಂಟಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸಮರ್ಥ ಅಧಿಕಾರಿಗಳು ನಿರ್ಧರಿಸಬೇಕು ಎಂದು ಹೇಳಿದರು.