ಶ್ರೀನಗರ: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಪ್ರತಿಭಟಿಸಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಹೇರಲಾಗಿದ್ದ ಬಂದ್ ಅಂತ್ಯಗೊಂಡಿದೆ. ಸೋಮವಾರದಿಂದ ಕಾಶ್ಮೀರದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಅಧಿಕೃತವಾಗಿ ಆರಂಭಗೊಂಡಿದೆ.
ಕಳೆದ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಖಮೇನಿ ಮೃತಪಟ್ಟಿದ್ದರು. ಈ ಘಟನೆಯನ್ನು ಖಂಡಿಸಿ ಕಾಶ್ಮೀರ ಕಣಿವೆಯಾದ್ಯಂತ ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕಳೆದ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.
ಚಳಿಗಾಲದ ರಜೆಯ ನಂತರ ಫೆಬ್ರವರಿ 23ರಂದೇ ಪ್ರೌಢಶಾಲೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ತೆರೆದಿದ್ದವು. ಆದರೆ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಮಾರ್ಚ್ 2ರಂದು ಆರಂಭವಾಗಬೇಕಿತ್ತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ವಿಳಂಬವಾಗಿತ್ತು.

