ನವದೆಹಲಿ: ದೇಶಾದ್ಯಂತ ಜೂನ್ 21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್‌ಗೆ ವಿಧಿಸಿರುವ ತಾತ್ಕಾಲಿಕ ನಿರ್ಬಂಧದ ವಿರುದ್ಧ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದೆ.

ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದ್ದು, ಇಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ನಡೆಸುತ್ತಿದೆ. ಹಿಂದಿನ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆಗಳು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಹರಿದಾಡಿದ್ದವು ಎಂಬ ಆರೋಪಗಳು ಕೇಳಿಬಂದಿದ್ದವು. ಇದೇ ಹಿನ್ನೆಲೆ ಮರುಪರೀಕ್ಷೆಯ ಪಾರದರ್ಶಕತೆ ಕಾಪಾಡಲು ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಟೆಲಿಗ್ರಾಮ್ ಸೇವೆಯನ್ನು ಜೂನ್ 22ರವರೆಗೆ ನಿರ್ಬಂಧಿಸುವ ಆದೇಶ ಹೊರಡಿಸಿದೆ. ಇದರ ಜೊತೆಗೆ ಟೆಲಿಗ್ರಾಮ್‌ನ ಸಂದೇಶ ಸಂಪಾದನೆ ಸೌಲಭ್ಯವನ್ನೂ ಜೂನ್ 30ರವರೆಗೆ ಭಾರತದಲ್ಲಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ.

ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದೆ. ಟೆಲಿಗ್ರಾಮ್ ಮೂಲಕ ನಕಲಿ ಪ್ರಶ್ನೆಪತ್ರಿಕೆಗಳು, ಸುಳ್ಳು ಮಾಹಿತಿ ಹಾಗೂ ಪರೀಕ್ಷಾ ವಂಚನೆಗೆ ಸಂಬಂಧಿಸಿದ ಜಾಲಗಳು ಸಕ್ರಿಯವಾಗಿದ್ದವು. ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡಲು ಈ ಕ್ರಮ ಅನಿವಾರ್ಯವಾಗಿತ್ತು ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ.

ಶಿಕ್ಷಣ ಸಚಿವಾಲಯ ಮತ್ತು ಎನ್‌ಟಿಎ ಮಾಹಿತಿ ಪ್ರಕಾರ, ಇತ್ತೀಚಿನ ವಾರಗಳಲ್ಲಿ ಟೆಲಿಗ್ರಾಮ್‌ನಲ್ಲಿ ‘Paper Leaked NEET’, ‘Re-NEET 2026’, ‘NEET Mafia’ ಸೇರಿದಂತೆ ಹಲವು ಹೆಸರಿನ ಚಾನೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಇವು ವಿದ್ಯಾರ್ಥಿಗಳನ್ನು ತಪ್ಪುದಾರಿಗೆ ಎಳೆಯುವ ಜೊತೆಗೆ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರದ ತಾತ್ಕಾಲಿಕ ನಿಷೇಧ ಆದೇಶವನ್ನು ತೆರವುಗೊಳಿಸುವಂತೆ ಕೋರಿ ಟೆಲಿಗ್ರಾಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.