ಕಾಶ್ಮೀರ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಾನುವಾರ ಉಗ್ರರ ದಾಳಿ ನಡೆದಿದೆ ಎನ್ನಲಾಗಿದೆ. ಗುಂಡಿನ ದಾಳಿಯ ಕಾರಣ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.

ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮೊದಲು ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಬಸ್ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಏಳು ಮಂದಿ ಮೃತ ಪಟ್ಟಿದ್ದು, ಒಟ್ಟು ಹತ್ತು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿತು ಎಂದು ಪೋನಿ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.