News Karnataka Kannada
Wednesday, April 17 2024
Cricket
ಕರ್ನಾಟಕ

ಇಂದು ಸಿಇಟಿ ಪರೀಕ್ಷೆ: ಕೊಡಗು ಜಿಲ್ಲಾಡಳಿತದಿಂದ ಸಿದ್ಧತೆ ಪೂರ್ಣ

Photo Credit :

ಇಂದು ಸಿಇಟಿ ಪರೀಕ್ಷೆ: ಕೊಡಗು ಜಿಲ್ಲಾಡಳಿತದಿಂದ ಸಿದ್ಧತೆ ಪೂರ್ಣ

ಮಡಿಕೇರಿ : ಇದೇ ಜು.30 ರಿಂದ ಆರಂಭವಾಗಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ 1200 ವಿದ್ಯಾರ್ಥಿಗಳು ಈ ಬಾರಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲಿದ್ದು, ಹಿಂದಿನ ವರ್ಷಗಳಿಗಿಂತ ಈ ಬಾರಿ ಪರಿಸ್ಥಿತಿ ಬೇರೆಯೆ ಇದೆ. ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಮತ್ತು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶಿವಲಿಂಗಶೆಟ್ಟಿ ಅವರು ತಿಳಿಸಿದ್ದಾರೆ.

ಕೋವಿಡ್-19 ಹಿನ್ನೆಲೆ ಕಂಟೈನ್‍ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳ ಪಟ್ಟಿ ಸಿದ್ಧಪಡಿಸಿ, ಅಲ್ಲದೇ ಆ ವಿದ್ಯಾರ್ಥಿಗಳನ್ನು ಪರೀಕ್ಷೆ ಸಂದರ್ಭ ಅವರಿರುವ ಸ್ಥಳದಿಂದ ಪರೀಕ್ಷಾ ಸ್ಥಳಕ್ಕೆ ಬಂದು ಪರೀಕ್ಷೆ ಬರೆಯುವಂತೆ ಹಾಗೂ ಮತ್ತೆ ಅವರನ್ನು ಮನೆಗೆ ಕಳುಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಒಬ್ಬ ವಿದ್ಯಾರ್ಥಿಯೂ ಸಿಇಟಿ ಪರೀಕ್ಷೆಯಿಂದ ವಂಚಿತರಾಗದಂತೆ ಗಮನಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದ್ದಾರೆ.

ಪರೀಕ್ಷಾ ಸಂದರ್ಭ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ  ಸೂಚಿಸಲಾಗಿದೆ. ಪರೀಕ್ಷಾ ಸಂದರ್ಭ ನಿಗದಿತ ಸಮಯದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಬಸ್ ವ್ಯವಸ್ಥೆ ಮಾಡುವಂತೆ ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಿಗೂ ಸಹ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಈ ಬಾರಿ 1,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲೆಯಲ್ಲಿ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 504 ವಿದ್ಯಾರ್ಥಿಗಳು, ಸಂತ ಜೋಸೆಫರ ಕಾಲೇಜು 312 ವಿದ್ಯಾರ್ಥಿಗಳು, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 216 ಮತ್ತು ಸೋಮವಾರ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 168 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಈಗಾಗಲೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, ಪರೀಕ್ಷೆ ನಡೆಯುವ ಪ್ರತಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ನೀರಿನ ಬಾಟಲಿ ಮತ್ತು ಮಾಸ್ಕ್‍ಗಳನ್ನು ತರುವಂತೆ ಸೂಚನೆ ನೀಡಲಾಗಿದೆ. 9 ಗಂಟೆಯೊಳಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಪ್ರತಿ ವಿದ್ಯಾರ್ಥಿಗೂ ಸಹ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡುವ ಮೊದಲು ಥರ್ಮಲ್ ಸ್ರ್ಕೀನಿಂಗ್ ನಡೆಸಲಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಸಂದರ್ಭ ಕೋವಿಡ್ ಸೋಂಕಿತ ಅಭ್ಯರ್ಥಿಗಳು ಮತ್ತು ನಿಯಂತ್ರಿತ ವಲಯಗಳಲ್ಲಿರುವ ಅಭ್ಯರ್ಥಿಗಳು ಪರೀಕ್ಷೆಯನ್ನು ಸುಗಮವಾಗಿ ಬರೆಯಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಂಡ ವ್ಯಕ್ತಿಗಳು ಕೋವಿಡ್ ಸೋಂಕಿತರಾಗಿದ್ದಲ್ಲಿ ಮತ್ತು ನಿಯಂತ್ರಿತ ವಲಯಗಳಲ್ಲಿ ಇದ್ದಲ್ಲಿ ಪರೀಕ್ಷೆಯನ್ನು ಸುಗಮವಾಗಿ ಬರೆಯಲು ಅನುಕೂಲ ಮಾಡಿಕೊಡುವ ಬಗ್ಗೆ ಶಿವಲಿಂಗ ಶೆಟ್ಟಿ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ (ಮೊಬೈಲ್ ಸಂ:9448794809) ಇವರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು