News Karnataka Kannada
Sunday, April 14 2024
Cricket
ಕರ್ನಾಟಕ

ಶಿವಮೊಗ್ಗ ಜಿಲ್ಲೆಯನ್ನು ಪ್ರವಾಸಿ ತಾಣವಾನ್ನಾಗಿಸಲು ಅಗತ್ಯ ಕ್ರಮ: ಸಂಸದ ಬಿ.ವೈ.ರಾಘವೇಂದ್ರ

Photo Credit :

ಶಿವಮೊಗ್ಗ ಜಿಲ್ಲೆಯನ್ನು ಪ್ರವಾಸಿ ತಾಣವಾನ್ನಾಗಿಸಲು ಅಗತ್ಯ ಕ್ರಮ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ರೈಲ್ವೇ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಅನೇಕ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕ್ರಿಯವಾಗಿದ್ದು, ಮುಂಬರುವ ದಿನಗಳಲ್ಲಿ ತಜ್ಞರ ಸಲಹೆ ಪಡೆದು ಜಿಲ್ಲೆಯನ್ನು ಪ್ರವಾಸಿಗರ ಆಕರ್ಷಕ ತಾಣವನ್ನಾಗಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಇಂದು ನಗರದ ಹೋಟೆಲ್ ಒಂದರಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ರೈಲ್ವೆ ಮತ್ತು ಪ್ರವಾಸಿ ತಾಣಗಳ ಅಭಿವೃದ್ದಿಗೆ ಈಗಾಗಲೇ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ವಿವರಿಸಿದರು. ಜಿಲ್ಲೆಯ ಆಯ್ದ ನಾಲ್ಕು ಸ್ಥಳಗಳಲ್ಲಿ ರೈಲ್ವೇ ಮೇಲ್ಸುತುವೆ ಮತ್ತು ಕೆಳಸೇತುವೆಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ವಿಶೇಷವಾಗಿ ನಗರದ ಉಷಾ ನರ್ಸಿಂಗ್ ಹೋಂ ಬಳಿ 60.76ಕೋಟಿ ವೆಚ್ಚದಲ್ಲಿ, ಭದ್ರಾವತಿ ಸಮೀಪದ ಕಡದಕಟ್ಟೆಯಲ್ಲಿ 25.92ಕೋಟಿ ವೆಚ್ಚದಲ್ಲಿ, ಶಿವಮೊಗ್ಗ ನಗರದ ಕಾಶೀಪುರ ಸಮೀಪ 29.63ಕೋಟಿ ವೆಚ್ಚದಲ್ಲಿ ಹಾಗೂ ವಿದ್ಯಾನಗರದ ರೈಲ್ವೆ ನಿಲ್ದಾಣದ ಹತ್ತಿರ 44.00ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನುಮತಿ ದೊರೆತಿದೆ ಅಲ್ಲದೆ ಅನುದಾನ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದವರು ನುಡಿದರು.

ರಾಜ್ಯದಲ್ಲಿ ಆಯ್ದ 5ಸ್ಥಳಗಳಲ್ಲಿ ರೈಲ್ವೆ ಕೋಚಿಂಗ್ ಮತ್ತು ಟರ್ಮಿನಲ್ ಸೆಂಟರ್‍ಗಳಿದ್ದು, ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿಯೂ ಟರ್ಮಿನಲ್ ನಿರ್ಮಾಣಗೊಳ್ಳಲಿದ್ದು, ಅದಕ್ಕಾಗಿ 75ಕೋಟಿ ಅನುದಾನ ಮಂಜೂರಾಗಿದೆ. ಈ ಸಂಬಂಧ ಭೂಸ್ವಾದೀನ ಪ್ರಕ್ರಿಯೆ ಇನ್ನೂ ಒಂದು ವಾರದೊಳಗೆ ಪೂರ್ಣಗೊಳ್ಳುವ ವಿಶ್ವಾಸ ತಮಗಿರುವುದಾಗಿ ಅವರು ತಿಳಿಸಿದ ಅವರು, ಸೆಪ್ಟಂಬರ್ ಮಾಸಾಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಸರ್ವೇ ಕಾರ್ಯವು 2ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಶಿಕಾರಿಪುರ ಮತ್ತು ಶಿವಮೊಗ್ಗ ಹಾಗೂ ಎರಡನೇ ಹಂತದಲ್ಲಿ ಶಿಕಾರಿಪುರ ಮತ್ತು ರಾಣೆಬೆನ್ನೂರು ಮಾರ್ಗದ ಸರ್ವೇಕಾರ್ಯ ನಡೆಯಲಿದೆ. ಈಗಾಗಲೇ ಮೊದಲ ಹಂತದಲ್ಲಿ ಬರುವ 14ಹಳ್ಳಿಗಳಲ್ಲಿ ಕಂದಾಯ ಮತ್ತು ರೈಲ್ವೆ ಇಲಾಖೆಗಳ ಜಂಟಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. 8ಗ್ರಾಮಗಳಿಗೆ ಅಂತಿಮ ಹಂತದ ನೋಟೀಫಿಕೇಶನ್ ಕೂಡ ಆಗಿದೆ. ಮುಂದಿನ ಒಂದು ತಿಂಗಳಲ್ಲಿ ಭೂಪರಿಹಾರ ನೀಡಿ ಈ ಭಾಗದ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

ಜಿಲ್ಲೆಯಲ್ಲಿ ಅನೇಕ ಸ್ಥಳಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಯೋಗ್ಯವಾಗಿವೆ. ಅವುಗಳಲ್ಲಿ ಪ್ರಮುಖವಾದ ಕೆಲವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ಜೋಗದ ಜಲಪಾತ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು 150ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇಲ್ಲಿನ 22ಎಕರೆ ಪ್ರದೇಶದಲ್ಲಿ ವೀಕ್ಷಣಾಗೋಪುರ, ಕಾರಂಜಿಗಳ ನಿರ್ಮಾಣ, ವಿಶ್ರಾಂತಿ ಗೃಹಗಳು, ಉದ್ಯಾನವನ, ವಿದ್ಯುದಾಗಾರಕ್ಕೆ ಪ್ರವಾಸಿಗರಿಗೆ ಅವಕಾಶ ಹಾಗೂ ಮಳೆಗಾಲವನ್ನು ಹೊರತುಪಡಿಸಿ ವರ್ಷ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಜಲಪಾತಕ್ಕೆ ನೀರು ಹರಿಸುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಸರ್ಕಾರವು ಮುಂದಿನ ಬಜೆಟ್‍ನಲ್ಲಿ ಘೋಷಿಸುವ ನಿರೀಕ್ಷೆ ಇದೆ ಎಂದರು.

25ಕೋಟಿ ರೂ.ಗಳ ವೆಚ್ಚದಲ್ಲಿ ಉಡುತಡಿಯ ಅಕ್ಕಮಹಾದೇವಿ ಜನ್ಮಸ್ಥಳವನ್ನು ದೆಹಲಿಯ ಅಕ್ಷರಧಾಮದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇದು ಅಭಿವೃದ್ದಿಯ ನಂತರ 12ನೇ ಶತಮಾನದ ಅಕ್ಕನ ಇತಿಹಾಸ ಸಾರುವಂತೆ ಸೃಷ್ಠಿಗೊಳ್ಳಲಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲಿನ ಆನೆಬಿಡಾರವನ್ನು ಸುಮಾರು 25ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು.

ಶಿವಮೊಗ್ಗದಲ್ಲಿ 5ಹೆದ್ದಾರಿಗಳಿವೆ. ನಗರದಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಇವುಗಳನ್ನು ಒಳಗೊಂಡು 34ಕಿ.ಮೀ. ಉದ್ದದ ವರ್ತುಲ ರಸ್ತೆ ನಿರ್ಮಾಣಗೊಳ್ಳಲಿದೆ. ಈ ಪೈಕಿ 15ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಸೇರಿದೆ. 15ಕಿ.ಮೀ. ಶಿವಮೊಗ್ಗ-ತುಮಕೂರು ಹೆದ್ದಾರಿ ಸೇರಿದೆ. ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 560ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ. ಈ ಕಾಮಗಾರಿಗೆ ರಾಜ್ಯದಿಂದ 100ಕೋಟಿ ರೂ. ಹಾಗೂ ಕೇಂದ್ರದಿಂದ 430ಕೋಟಿ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಉಳಿದಂತೆ ವಿಮಾನ ನಿಲ್ದಾಣ ಕಾಮಗಾರಿಗೆ 2ನೇ ಹಂತದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಂಕಿಪಾರ್ಕ್ ಸ್ಥಾಪನೆಗೆ ಸ್ಥಳ ನಿಗಧಿಪಡಿಸಲಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ತಜ್ಞರ ಅಭಿಪ್ರಾಯ ಪಡೆದು, ಯಾರಿಗೂ ತೊಂದರೆಯಾಗದಂತೆ ಮಂಕಿಪಾರ್ಕ್ ಸ್ಥಾಪಿಸಲಾಗುವುದು ಎಂದರು.

ವಿಶೇಷವಾಗಿ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ಕೈಗಾರಿಕೆಗಳಾದ ಮೈಸೂರು ಕಾಗದ ಕಾರ್ಖಾನೆ ಹಾಗೂ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ 1000ಜನರಿಗೆ ಉದ್ಯೋಗಾವಕಾಶ ಒದಗಿಸುವ ಹಾಗೂ ಪರೋಕ್ಷವಾಗಿ 1000ಜನರಿಗೆ ಉದ್ಯೋಗ ಒದಗಿಸುವ ಷರತ್ತಿಗೊಳಪಟ್ಟು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಉಳಿದಂತೆ ಕಾರ್ಖಾನೆಯ 1ಲಕ್ಷ ಎಕರೆ ಅರಣ್ಯಭೂಮಿಯನ್ನು ಕಾರ್ಖಾನೆಗೆ ಉಳಿಸಿಕೊಳ್ಳಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೋಗದ ಜಲಪಾತ, ರೈಲ್ವೇ ಮೇಲ್ಸೇತುವೆ ನಿರ್ಮಾಣ ಮುಂತಾದವುಗಳ ಕುರಿತು ಈಗಾಗಲೇ ಸಿದ್ಧಪಡಿಸಲಾಗಿರುವ ನೀಲನಕ್ಷೆಯನ್ನು ತಜ್ಞ ಇಂಜಿನಿಯರರು ಪ್ರಸ್ತುತ ಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಬಿಜೆಪಿ. ಜಿಲ್ಲಾಧ್ಯಕ್ಷ ಡಿ.ಟಿ.ಮೇಘರಾಜ್, ರಾಜ್ಯ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಜ್ಯೋತಿಪ್ರಕಾಶ್, ದತ್ತಾತ್ರಿ, ಜ್ಞಾನೇಶ್ವರ್, ಶ್ರೀಮತಿ ಸುವರ್ಣಶಂಕರ್, ಚನ್ನಬಸಪ್ಪ, ಲಕ್ಷ್ಮೀನಾರಾಯಣ ಕಾಶಿ, ಗಿರೀಶ್ ಪಟೇಲ್ ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು