ಚಿಕ್ಕಬಳ್ಳಾಪುರ: ನಲ್ಲಗುಟ್ಟಪಾಳ್ಯದ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಕ್ರೂಸರ್ ಚಾಲಕ ಜಂಗಮಾರಪನಹಳ್ಳಿ ಗ್ರಾಮದ ಶ್ರೀನಿವಾಸ್ (27) ಹಾಗೂ ವೆಂಕಟೇಶಪ್ಪ (70) ಮೃತ ದುರ್ದೈವಿಗಳು.
ಕೆಎಸ್ಆರ್ಟಿಸಿ ಬಸ್ ನಾಸ್ತಿಮನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕ್ರೂಸರ್ ಗೆ ಡಿಕ್ಕಿ ಹೊಡೆದಿದೆ. ಇನ್ನೂ ಈ ಅಪಘಾತಕ್ಕೆ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆಗಿ ಸಂಭವಿಸಿದೆ ಎನ್ನಲಾಗಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲ ಪ್ರಯಾಣಿಕರಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ. ಸ್ಥಳೀಯರು ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.