ಮಡಿಕೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲನೆ ಮಾಡಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು.
ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ತಮ್ಮ ತಮ್ಮ ಇಲಾಖೆಯಲ್ಲಿ ಅಧಿಕಾರಿಗಳು ಚುನಾವಣಾ ಆಯೋಗದ ನಿಯಮವನ್ನು ಪಾಲಿಸಬೇಕಿದ್ದು, ಅದರಂತೆ ನಡೆದುಕೊಳ್ಳಬೇಕಿದೆ ಎಂದು ಅವರು ನಿರ್ದೇಶನ ನೀಡಿದರು.
ನಾನಾ ಇಲಾಖೆ ಅಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ಚುನಾವಣೆ ಕರ್ತವ್ಯ ಪಾಲನೆ ಮಾಡಬೇಕು. ಅಧಿಕಾರಿಗಳ ಕಾರ್ಯಶೈಲಿ ಮತ್ತು ಚಟುವಟಿಕೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಲವು ಗೊಂದಲಗಳು ಬರಬಹುದು. ಅಂತಹ ಸಂದರ್ಭದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಚುನಾವಣಾಧಿಕಾರಿ ಅವರು ಆದೇಶವನ್ನು ಚಾಚು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.