ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಅವರು, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು‌ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.