ಹುಬ್ಬಳ್ಳಿ: ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಯುವ ನಾಯಕ ಮತ್ತು ಮಾಜಿ ಶಾಸಕ ಮಧು ಬಂಗಾರಪ್ಪನವರಿಗೆ ಸ್ವಾಗತ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಜನಪರ ಕಾಳಜಿಯನ್ನು ಮಧು ಅವರಲ್ಲಿಯೂ ನಾನು ಕಾಣುತ್ತಿದ್ದೇನೆ’ ಎಂದಿದ್ದಾರೆ.
‘ನನ್ನ ರಾಜಕೀಯ ಗುರುಗಳಾದ ಎಸ್.ಬಂಗಾರಪ್ಪನವರ ಪುತ್ರ ಶ್ರೀ ಮಧು ಬಂಗಾರಪ್ಪನವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲು ಸಂತೋಷವೆನಿಸುತ್ತಿದೆ. ಸಮಾನ ಮನಸ್ಕರ ಜೊತೆಗೂಡಿ ಪಕ್ಷದ ಬಲವರ್ಧನೆ ಮಾಡುವುದು ನಮ್ಮ ಗುರಿಯಾಗಿದ್ದು, ಮಧು ಬಂಗಾರಪ್ಪ ಅವರು ಆ ನಿಟ್ಟಿನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವರೆಂಬ ವಿಶ್ವಾಸ ನನಗಿದೆ’ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ನಲ್ಲಿ ಹೇಳಿದ್ದಾರೆ..