ಹುಬ್ಬಳ್ಳಿ: ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವಿಗೆ ಆಗ್ರಹಿಸಿ ಜೂನ್ 8 ರಂದು ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲಿನ ಧ್ವನಿವರ್ಧಕ ನಿಷೇಧಕ್ಕಾಗಿ ವರ್ಷದಿಂದ ಹೋರಾಟ ಮಾಡುತ್ತಿದ್ದೇವೆ. ಆದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ನಿಮ್ಮ ಕೈಯಲ್ಲಿ ಆಗಲಿಲ್ಲ ಅಂದ್ರೆ ಅಧಿಕಾರ ಬಿಡಿ, ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಆದೇಶ ನೀಡಿದೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ಧಕ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪಾಲಿಸುತ್ತಿಲ್ಲ. ಹೀಗಾಗಿ ಅಜಾನ್ ಪ್ರತಿಯಾಗಿ ಸುಪ್ರಭಾತ ಹಾಕುವುದಾಗಿ ಎಚ್ಚರಿಕೆ ನೀಡಿದ್ದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಗಿದಿದೆ. ಹಳೆ ಲೌಡ್ ಸ್ಪೀಕರ್ ಕೆಳಗಿಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.