ಕುಂದಗೋಳ : ಜನಸಾಮಾನ್ಯರು ಬಿಜೆಪಿ ಸರ್ಕಾರದ ಬೆಲೆ ಏರಿಕೆ ಸ್ಥಿತಿಯಲ್ಲಿ ಸಿಕ್ಕಿ ಒದ್ದಾಡುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನ ವಿರೋಧಿಯಾಗಿದ್ದು, ಅಭಿವೃದ್ಧಿ ಕೆಲಸಗಳನ್ನು ಮಾಡದೇ ಬೆಲೆ ಏರಿಕೆಯಲ್ಲಿಯೇ ಮಗ್ನವಾಗಿವೆ ಎಂದು ಕಾಂಗ್ರೆಸ್ ಮುಖಂಡ ಗೌಡಪ್ಪಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿವೆ. ಇದರಿಂದ ಜನ ಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಇದರ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.
ದಿನ ಬಳಕೆಯ ವಿದ್ಯುತ್ ಸೇರಿ ಹಲವು ಆಹಾರ ಸಾಮಾಗ್ರಿ ದರ ಏರಿಕೆ ಆಗಿದೆ. ಪೆಟ್ರೋಲ್ ದರ ಏರಿಕೆ ಆಗುತ್ತಲೇ ಇದೆ. ಪ್ರಧಾನಿ ತಿಂಗಳಿಗೊಮ್ಮೆ ಮನ್ ಕೀ ಬಾತ್ ಮಾಡುತ್ತಾರೆ. ಎಲ್ಲೂ ಅವರು ಈ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ. ಇದರೊಂದಿಗೆ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ, ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಹುನ್ನಾರ ಇದು. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ಸಾಮಾನ್ಯರ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೇ ಕಾಂಗ್ರೆಸ್ ಪಕ್ಷದಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.