ಗದಗ: ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.
ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸವಾರನನ್ನು ಬಿಂಕದಕಟ್ಟಿ ಗ್ರಾಮದ ನಿಖಿಲ್ (32) ಎಂದು ಗುರುತಿಸಲಾಗಿದೆ. ಆತನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.