ಬೆಳಗಾವಿ: ಲಾರಿ, ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಹುಕ್ಕೇರಿ ತಾಲೂಕಿನ ಸಂಕೇಶ್ವರ-ಗೋಟುರ ರಸ್ತೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ನಿವಾಸಿ ಹಣಮಂತ ಪಾಯಾಳ (55) ಮೃತಪಟ್ಟ ದುರ್ದೈವಿ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ವಿಷಯ ತಿಳಿಯುತ್ತಿದ್ದಂತೆ ಸಂಕೇಶ್ವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಅಪಘಾತಕ್ಕೆ ಸಂಬಂಧಿಸಿದಂತೆ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

