ವಿಜಯಪುರ,ಅ.20 : ರಸ್ತೆಬದಿ ಕೆಟ್ಟು ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತರ ಹೆಸರು, ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ.
ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಬಳಿಯ ರಸ್ತೆಬದಿ ಲಾರಿಯೊಂದು ಕೆಟ್ಟು ನಿಂತಿತ್ತು. ಮುಂಜಾನೆ ಚಾಲಕ ಲಾರಿಯನ್ನು ದುರಸ್ತಿ ಮಾಡುತ್ತಿದ್ದರು. ಇದು ಗಮನಕ್ಕೆ ಬಾರದೆ ಕಾರು ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದರಿಂದ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ವ್ಯಕ್ತಿ, ಮಗು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರಿನೊಳಗೆ ಸಿಕ್ಕಿಕೊಂಡಿದ್ದ ಮೂವರ ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು.
ಮೃತರು ಎಲ್ಲಿಯವರು, ಎಲ್ಲಿಂದ ಎಲ್ಲಿಗೆ ಹೋಗುತ್ತಿದ್ದರು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ