ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ನಡೆದಿದೆ.
ವಿಜಯಪುರ – ಕಲಬುರಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಈ ಅಪಘಾತ ಸಂಭವಿಸಿದ್ದು, ಮೋರಟಗಿ ಕಡೆಯಿಂದ ಸಿಂದಗಿ ಕಡೆ ತೆರಳುತ್ತಿದ್ದ ಬಸ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಇನ್ನ ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ಹೊತ್ತಿ ಉರಿದಿದೆ. ಬಸ್ ಪ್ರಯಾಣಿಕರು ತಕ್ಷಣ ಕೆಳಗೆ ಇಳಿಯುವ ಮೂಲಕ ಅಪಾಯದಿಂದ ಪಾರಾಗಿದ್ದಾರೆ. ಆದರೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಬಸ್ಸಿನ ಕೆಳಗೆ ಸಿಲುಕಿದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.