ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಕಲಿಕೆಗೆ ನಾಳೆಯಿಂದಲೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದ್ದು. ಅಕ್ಟೋಬರ್ 1ರಿಂದಲೇ ಈ ತರಗತಿಗಳು ಆರಂಭವಾಗುತ್ತವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯ ಬಗ್ಗೆ ಬಿಜೆಪಿಯ ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠವು ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ವರ್ಚುವಲ್ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ‘ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರ್ಚುವಲ್ ವೇದಿಕೆ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ’ ಎಂದರು.
ಅಧಿಕೃತವಾಗಿ ನಾಳೆಯಿಂದಲೇ ಉನ್ನತ ಶಿಕ್ಷಣ ವಿಭಾಗಕ್ಕೆ ಸಂಬಂಧಿಸಿದ ಎಲ್ಲ ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗುತ್ತದೆ. ಈ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲೇ ತಮ್ಮ ಆಯ್ಕೆಯ ಪಠ್ಯವನ್ನು ವ್ಯಾಸಂಗ ಮಾಡುವರು. ಅಕ್ಟೋಬರ್ ನಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದು ಹೇಳಿದರು.