ಬೆಂಗಳೂರು : ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ.
ದೆಹಲಿಗಿಂದು ಭೇಟಿ ನೀಡುವ ಮುಖ್ಯಮಂತ್ರಿಗಳು ಗುರುವಾರ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ಇತರೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ. ಈ ವೇಳೆ ಸಚಿವರೊಂದಿಗೆ ಮೇಕೆದಾಟು ಯೋಜನೆ ಕುರಿತಂತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಇದರೊಂದಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೃಶಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಹಲವಾರು ಯೋಜನೆಗಳು ಹಾಗೂ ರಾಜ್ಯಕ್ಕೆ ಬರಬೇಕಿರುವ ಅನುದಾನ ಕುರಿತು ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ