ಧಾರವಾಡ: ಕಳೆದೆರಡು ದಿನಗಳಿಂದ ಧಾರವಾಡದ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 939 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಕೋವಿಡ್ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 182ಕ್ಕೇರಿದೆ. ಕಾಲೇಜಿನಲ್ಲಿ ಮೂರನೇ ಹಂತದ ಕೋವಿಡ್ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ ಲಭಿಸಿದ್ದು, ಇದರಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
ಮೊನ್ನೆ ನವೆಂಬರ್ 17ರಂದು ಎಸ್ ಡಿಎಂ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅದರಲ್ಲಿ ಕೆಲವು ವಿದ್ಯಾರ್ಥಿಗಳ ಪೋಷಕರು ಸಹ ಭಾಗವಹಿಸಿದ್ದರು.ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಹಾಸ್ಟೆಲ್ನ 270 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.