ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ತಿಂಗಳಲ್ಲಿ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದರು.
ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಕಾಲಿಕ ಮಳೆಯಾಗಿದೆ. ತಮಿಳುನಾಡು ಮತ್ತು ಆಂಧ್ರಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಮಳೆ ಸುರಿದಿದೆ. ಇದರಿಂದ ರೈತರ ಬೆಳೆಗಳಿಗೆ ಹಾನಿಯಾಗಿದೆ. ಈ ಕುರಿತು ನಿಖರ ಮಾಹಿತಿ ಪಡೆದುಕೊಳ್ಳಲು ಸಭೆ ನಡೆಸಲಾಯಿತು.
ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ತೋಟಗಾರಿಕೆ ಸಚಿವ ಮುನಿರತ್ನ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಗೃಹ ಮತ್ತು ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.