ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ 19 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದರು.
ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸ್ವೀಕರ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಕಳೆದ 2 ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ನಾಯಕರು ಶುಭ ದಿನ, ಶುಭ ಗಳಿಗೆ ನೋಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಕುಮಾರಸ್ವಾಮಿ, ಹೆಚ್ಡಿ ರೇವಣ್ಣ, ಸ್ವರೂಪ್, ಶಾರದಾ ನಾಯಕ್, ಸಿ.ಬಿ.ಸುರೇಶ್ ಬಾಬು ಪ್ರಮಾಣವಚನ ಸ್ವೀಕರಿಸಿದರು.