ಬೆಂಗಳೂರು, ಜ. 03 : ದೇಶದಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಸೋಮವಾರ ಚಾಲನೆ ಸಿಗಲಿದೆ. ಕರ್ನಾಟಕದಲ್ಲಿ 31.75 ಲಕ್ಷ ಮಕ್ಕಳು ಲಸಿಕಾಕರಣಕ್ಕೆ ಒಳಪಡಲಿದ್ದಾರೆ.
ಸೋಮವಾರ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಆರೋಗ್ಯ ಇಲಾಖೆ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ 31.75 ಲಕ್ಷ ಮಕ್ಕಳು ಲಸಿಕೆ ಪಡೆಯಲಿದ್ದಾರೆ. ಮೊದಲ ದಿನವೇ ನಾಲ್ಕು ಸಾವಿರಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ 6 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದೆ.
ರಾಜ್ಯದಲ್ಲಿ 16 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಸಂಗ್ರಹವಿದೆ. ಶಾಲೆ ಮತ್ತು ಕಾಲೇಜುಗಳ ಕ್ಯಾಂಪಸ್ನಲ್ಲಿಯೇ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಸಮೀಪದ ಆರೋಗ್ಯ ಕೇಂದ್ರಕ್ಕೆ ಸಹ ತೆರಳಿ ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ.