ಬೆಂಗಳೂರು : ಮಳೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗಲಿದೆ.
ಇಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಲಿದ್ದು, ಇದರೆ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.