ಬೆಂಗಳೂರು: ಕೆಲವೊಂದು ಸಮಸ್ಯೆಗಳಿಂದಾಗಿ ರಾಜ್ಯದಲ್ಲಿ ನೀಟ್ ಬರೆಯಲು ವಿಫಲರಾಗಿರುವಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಮನವಿ ಮಾಡಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಆಗಿರುವ ಬದಲಾವಣೆ ಮತ್ತು ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಆಗಿರುವಂತಹ ವಿಳಂಬದಿಂದಾಗಿ ರಾಜ್ಯದ ಸುಮಾರು 500 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ.
ನೀಟ್ ಪರೀಕ್ಷೆಯು ಮಧ್ಯಾಹ್ನ 2 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಬೇಕಿತ್ತು. ಆದರೆ ಹುಬ್ಬಳ್ಳಿಯಿಂದ ಹೊರಡುವ ಹಂಪಿ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ 7 ಗಂಟೆಗೆ ಬರಲು ಬದಲು ಮಧ್ಯಾಹ್ನ 2.30ರ ವೇಳೆಗೆ ತಲುಪಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ.
ವಿದ್ಯಾರ್ಥಿಗಳು ತಮ್ಮದಲ್ಲದ ತಪ್ಪಿನಿಂದಾಗಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದಾರೆ. ಹೀಗಾಗಿ ಸದಾನಂದ ಗೌಡ ಅವರು ಸಂಬಂಧಪಟ್ಟ ಇಲಾಖೆ ಮತ್ತು ಸಚಿವ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದಾರೆ.