ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವಾಗ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ರಾಜ್ಯಾಧ್ಯಕ್ಷ, ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ.
ಕೆ.ಎಸ್.ಈಶ್ವರಪ್ಪ ಅವರ ಆಪ್ತ ವಿರೂಪಾಕ್ಷಪ್ಪ ಅವರು ಕೊನೆ ಸಮಯದಲ್ಲಿ ಬಿಜೆಪಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದ್ದಾರೆ. ಅವರು ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಲು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಸೇರುವುದಾಗಿ ಘೋಷಣೆ ಕೂಡ ಮಾಡಿದ್ದಾರೆ. ಇಂದು ಅಥವಾ ನಾಳೆ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ.
ಸಿಂಧನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ನೀಡದೆ ಕೊಲ್ಲಾ ಶೇಷಗಿರಿ ರಾವ್ ಅವರಿಗೆ ನೀಡಲಾಗಿತ್ತು. ಟಿಕೆಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ವಿರೂಪಾಕ್ಷಪ್ಪ ಅವರು ಕಾಂಗ್ರೆಸ್ ಪಕ್ಷ ಸೇರಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.