ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.ಜ.6ರಂದು (ಗುರುವಾರ) ಒಂದೇ ದಿನ ರಾಜ್ಯದಲ್ಲಿ 107 ಒಮಿಕ್ರಾನ್ ಪ್ರಕರಣಗಳು ದೃಢವಾಗಿದೆ.
ಇದರೊಂದಿಗೆ ರಾಜ್ಯದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಹೆಚ್ಚಿದ ಕೋವಿಡ್: ರಾಜ್ಯದಲ್ಲಿ ಗುರುವಾರ 5,031 ಮಂದಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.3.95ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,173ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 4,324 ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 18,913ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ, ಬೆಂಗಳೂರು ನಗರ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.7.5ಕ್ಕೆ ಏರಿಕೆಯಾಗಿದೆ.