ಬೆಂಗಳೂರು: ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ. ನಮಗೆ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ ಎಂದು ಸುರೇಶ್ಕುಮಾರ್ ಹೇಳಿದ್ದಾರೆ.
ಶಾಲೆಗಳನ್ನು ತೆರೆಯುವ ಕುರಿತು ಎಲ್ಲ ಶಾಸಕರ ಅಭಿಪ್ರಾಯವನ್ನು ಕೇಳಿದ್ದೆ. ಅಭಿಪ್ರಾಯ ಕೇಳಿದ ಮಾತ್ರಕ್ಕೆ ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ಸರ್ಕಾರ ಈಗಾಗಲೇ ಕೈಗೊಂಡೇ ಬಿಟ್ಟಿದೆ ಎಂದರ್ಥವಲ್ಲ ಎಂದು ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಡನೆ ಸಮಾಲೋಚನೆ ನಡೆಸಿದ ನಂತರವೇ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಎಲ್ಲರನ್ನೂ ಕರೆದು ಸಾಧಕ–ಬಾಧಕಗಳನ್ನು ಚರ್ಚಿಸಿದ ನಂತರವೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಸ್ಪಷ್ಟಪಡಿಸಿದ್ದಾರೆ.