ಬೆಂಗಳೂರು : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 8 ಜನರ ಬಂಧನವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ 8 ಜನರ ಬಂಧನವಾಗಿದೆ.ಕೆಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳು ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದರು.
ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ 144 ಸೆಕ್ಷನ್ ನಿಷೇಧಾಜ್ಞೆ ಮುಂದುವರಿಸುತ್ತೇವೆ. ಅಲ್ಲಿ ಜಿಲ್ಲಾಧಿಕಾರಿಗಳು ಪರಿಸ್ಥಿತಿ ನೋಡಿಕೊಂಡು ನಿರ್ಣಯ ತೆಗೆದುಕೊಳ್ಳುತ್ತಾರೆ, ಹತ್ಯೆ ಘಟನೆಯಾದ ಬಳಿಕ ಉಂಟಾದ ಕಲ್ಲು ತೂರಾಟ, ಗಲಭೆಯಲ್ಲಿ ಆದ ಹಾನಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಿದರು.