ಬೆಂಗಳೂರು: 2021ರ ಮಾರ್ಚ್ 24ರಿಂದ 31ರವರೆಗೆ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಈ ಚಲನಚಿತ್ರೋತ್ಸವವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಂಘಟಿಸುತ್ತಿದ್ದು, ‘ಭಾರತೀಯ ಪ್ರದರ್ಶನ ಕಲೆಗಳ ಮಹತ್ವ’ ವಿಷಯದ ಮೇಲೆ ಏರ್ಪಡಿಸಲು ನಿರ್ಣಯಿಸಲಾಯಿತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತಳೆಯಲಾಯಿತು.
ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದ್ದು, ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ FIAPF ಮಾನ್ಯತೆ ದೊರೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್ನ ಪಿವಿಆರ್ ಚಿತ್ರಮಂದಿರದ 11 ಪರದೆಗಳಲ್ಲಿ ಒಟ್ಟು 50ಕ್ಕೂ ಹೆಚ್ಚು ದೇಶಗಳ ಸುಮಾರು 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.