ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ಎರಡು ವಾರದಲ್ಲಿ ಅರ್ಜಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಹೀಗಾಗಿ ಶೀಘ್ರ ವಿಚಾರಣೆಗೆ ಸಿಬಿಐ ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನ.22 ಕ್ಕೆ ನಿಗದಿಪಡಿಸಿದೆ.
ಹೌದು, ಅಕ್ಟೋಬರ್ 20 ರಂದು ಈ ಕೇಸ್ಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದಕ್ಕೆ ಕಾರಣವೇನು ಎಂಬುದಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪಿನ ವಿವರವನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಸಿಬಿಐ 84 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಸಲ್ಲಿಸಿದ್ದ 2412 ಪುಟಗಳಷ್ಟು ದಾಖಲೆ ಪರಿಶೀಲಿಸಿದೆ. ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖಾ ಪ್ರಗತಿ ವರದಿ ಸಲ್ಲಿಸಿದ್ದು, ನಗದು ವ್ಯವಹಾರ ಬಗ್ಗೆ ಉಲ್ಲೇಖಿಸಲಾಗಿತ್ತು. ಜೊತೆಗೆ ಅಗಾಧ ಪ್ರಮಾಣದ ಅನುಮಾನಾಸ್ಪದ ನಗದು ವ್ಯವಹಾರ ಬಗ್ಗೆ ಉಲ್ಲೇಖಿಸಲಾಗಿತ್ತು.