ಬೆಂಗಳೂರು: ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ವೇತನ ಪರಿಷ್ಕರಣೆ ಮನವಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದೆ. ಸಾರಿಗೆ ನಿಗಮಗಳ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ಮನವಿ ಮಾಡಿಕೊಂಡಿದ್ದವು.
ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ವೇತನ ಪಾವತಿ- ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಅವಕಾಶ ಇಲ್ಲ. ಸಾರಿಗೆ ನಿಗಮಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸೂಚನೆ ನೀಡಿದೆ.
ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನೌಕರರಿಗೆ 15% ವೇತನ ಪರಿಷ್ಕರಣೆ ಮಾಡಿತ್ತು. ಆ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿತ್ತು. ಆದರೆ ನೂತನ ಕಾಂಗ್ರೆಸ್ ಸರ್ಕಾರ ಇನ್ಮುಂದೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಅನುದಾನ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ಆದೇಶದಿಂದ ಸಾರಿಗೆ ನಿಗಮಗಳಿಗೆ ಬಿಗ್ ಶಾಕ್ ಆಗಿದೆ.