ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅ.13ರ ವರೆಗೂ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.