ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದ್ದು, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಸದ್ಯ ದಂಡ ವಿಧಿಸುವ ಪ್ರಸ್ತಾಪ ಇಲ್ಲ. ಪರಿಸ್ಥಿತಿ ನೋಡಿಕೊಂಡು ಮತ್ತೆ ಸಭೆ ನಡೆಸಿ ಚರ್ಚಿಸಲಾಗುವುದು. ಮಾಸ್ಕ್ ವಿಚಾರದಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದೆ. ಎಲ್ಲರೂ ಮಾಸ್ಕ್ ಧರಿಸುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಿಯಂತ್ರಿಸುವ ಪ್ರಸ್ತಾಪ ಸರ್ಕಾರ ಮುಂದೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಮೊದಲ ಹಾಗೂ ಎರಡನೇ ಡೋಸ್ ಲಸಿಕಾಕರಣದಲ್ಲಿ ಶೇ.100ರಷ್ಟು ಸಾಧನೆ ಮಾಡಲಾಗಿದೆ. ಆದರೆ, ಮೂರನೇ ಡೋಸ್ ಲಸಿಕೆಯನ್ನು ಶೇ.17ರಷ್ಟು ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ ಎಂದು ಹೇಳಿದರು.