ಬೆಂಗಳೂರು: ಇಂದಿನಿಂದ (ಮಾರ್ಚ್ 31) ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್, ಸ್ಮಾರ್ಟ್ವಾಚ್, ಇಯರ್ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.