ಬೆಂಗಳೂರು: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅನುಮೋದಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದರು.