ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ. ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ (ಜ. 27) ರಂದು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಯ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಲಹದಲ್ಲಿ ತೊಡಗಿದೆ. ಇವರ ಕಚ್ಚಾಟದಿಂದ ಆಡಳಿತ ಕುಸಿದಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಬಗ್ಗೆ ಆಗಲೇ ಜನತೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ. ಸರ್ಕಾರಕ್ಕೆ ಬರಗಾಲದಲ್ಲಿ ರೈತರ ಕಣ್ಣೀರೊರೆಸಲು ಸಾಧ್ಯವಾಗಿಲ್ಲ. ಅರಾಜಕತೆ ರಾಜ್ಯದಲ್ಲಿ ತಾಂಡವವಾಡುತ್ತಿದೆ ಎಂದು ಹೇಳಿದರು.