ಬೆಂಗಳೂರು: ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು, ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆಗೆ ಭಾರೀ ಆಕ್ರೋಶ ಕೇಳಿ ಬರುತ್ತಿದೆ. ಇನ್ನು ಇದಕ್ಕೆ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ನೇರವಾಗಿ ಜನರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಚೆಲ್ಲಾಟ ಆಡುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳುವುದನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್, ತನ್ನ ಚುನಾವಣಾ ಗ್ಯಾರಂಟೀಗಳನ್ನೂ ಈಡೇರಿಸುತ್ತಿಲ್ಲ. ಖಂಡಿತವಾಗಿಯೂ ಮುಂದಿನ ಚುನಾವಣೆಯಲ್ಲಿ ಜನತೆ ಕೈ ಗೆ “ಕೈ” ಕೊಡಲಿದ್ದಾರೆ ಎಂದಿದ್ದಾರೆ .